ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ನೀಡುತ್ತಿದ್ದ ಸಹಾಯಧನವನ್ನು ಕಡಿತಗೊಳಿಸಿದ್ದು, ಇದರ ಪರಿಣಾಮ ಇವಿ ವಾಹನಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.
ಇದುವರೆಗೆ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ನೀಡಲಾಗಿದ್ದು, ಇದೀಗ ಶೇಕಡ 50ರಷ್ಟು ರಸ್ತೆ ತೆರಿಗೆಯನ್ನು ವಿಧಿಸಲು ರಾಜ್ಯ ಸಾರಿಗೆ ಪ್ರಾಧಿಕಾರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದರ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬೆಲೆ ಮತ್ತಷ್ಟು ಹೆಚ್ಚಳವಾಗಲಿದ್ದು, ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ತಣ್ಣೀರು ಎರಚಿದಂತಾಗಿದೆ. ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2016ರ ಏಪ್ರಿಲ್ 1ರಿಂದ ಕಾರು, ವ್ಯಾನ್ ಗಳಿಗೆ ಹಾಗೂ 2017ರ 1ರಿಂದ ದ್ವಿಚಕ್ರ ವಾಹನಗಳಿಗೆ ರಸ್ತೆ ತೆರಿಗೆಯನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದ್ದು, ಇದೀಗ ಶೇಕಡ 50ರಷ್ಟು ರಸ್ತೆ ತೆರಿಗೆ ವಿಧಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.