ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಲು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾದ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು ಜಿಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತಲಾ ಮೂರು ಪರೀಕ್ಷೆಗಳನ್ನು ನಡೆಸಬೇಕಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷ ಆರಂಭವಾಗಿ ಮುಕ್ತಾಯಗೊಳ್ಳುವ ಹಂತದಲ್ಲಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಆರಂಭವಾಗಲಿದ್ದು, ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಬೇಕಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾದ ಸಿಬ್ಬಂದಿಯನ್ನು ಮೌಲ್ಯಮಾಪನ ಕಾರ್ಯ ಮುಗಿಯುವವರೆಗೆ ಚುನಾವಣೆ ಕಾರ್ಯದಿಂದ ವಿನಾಯಿತಿ ನೀಡಿ ನಂತರ ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತೆ ತಿಳಿಸಲಾಗಿದೆ.