ಚಿಕ್ಕಬಳ್ಳಾಪುರ: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿರುವುದು ಕಳವಳಕ್ಕೆ ಕಾರಣವಾಗುತ್ತಿದ್ದು, ಇದರ ಅಬ್ಬರ ಕೇವಲ ಒಂದೂವರೆ ತಿಂಗಳವರೆಗೆ ಮಾತ್ರ ಇರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ ಗಡಿ ಪ್ರದೇಶದಲ್ಲಿ ಸೂಕ್ತ ಎಚ್ಚರಿಕೆ ವಹಿಸಲಾಗುತ್ತಿದೆ. ವಿದೇಶ ಹಾಗೂ ಬೇರೆ ರಾಜ್ಯಗಳಿಂದ ಬಂದವರ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದು ಹೇಳಿದ್ದಾರೆ.
15 ರಿಂದ 18 ವರ್ಷದೊಳಗಿನ ಮಕ್ಕಳೆಲ್ಲರಿಗೂ ಸದ್ಯದಲ್ಲಿಯೇ ಕೋವಿಡ್ ಲಸಿಕೆ ಹಾಕುವ ಕಾರ್ಯ ಪೂರ್ಣಗೊಳಿಸಲಾಗುವುದು. ಈ ಗುರಿಯನ್ನು ಇನ್ನು ಒಂದೇ ವಾರದಲ್ಲಿ ತಲುಪಲಾಗುವುದು ಎಂದು ಹೇಳಿದ್ದಾರೆ.
ಓಮಿಕ್ರಾನ್ ವಿರುದ್ಧ ಬೇರೆ ರಾಷ್ಟ್ರಗಳು ಯಾವ ರೀತಿ ಹೋರಾಟ ಮಾಡುತ್ತಿವೆ, ಚಿಕಿತ್ಸೆ ನೀಡುತ್ತಿವೆ ಎಂಬುವುದನ್ನು ತಜ್ಞರೊಂದಿಗೆ ಚರ್ಚಿಸಿ ಆ ಕುರಿತು ರಾಜ್ಯದಲ್ಲಿ ಕೂಡ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ ಕೇವಲ ಒಂದೂವರೆ ತಿಂಗಳಲ್ಲಿಯೇ ಸೋಂಕಿನ ಅಬ್ಬರ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.