ಇತ್ತೀಚೆಗೆ ನಡೆದ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 27 ಸ್ಥಾನ ಗಳಿಸಿದ್ದು, ಬಿಜೆಪಿ 23 ಸ್ಥಾನ ಗಳಿಸಿದೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಮೇಯರ್ ಆಯ್ಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಜೆಡಿಎಸ್ ಸಹಕಾರ ಅನಿವಾರ್ಯವಾಗಿದೆ. ಇದನ್ನು ಎನ್ ಕ್ಯಾಶ್ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್ ನಾಯಕರು, ಅಧಿಕಾರಕ್ಕಾಗಿ ಚೌಕಾಸಿ ಆರಂಭಿಸಿದ್ದಾರೆ.
ಈಗಾಗಲೇ ತಮ್ಮ ಪಕ್ಷದ ನಾಲ್ವರು ಪಾಲಿಕೆಯ ಸದಸ್ಯರನ್ನು ಬೆಂಗಳೂರಿಗೆ ಕರೆಸಿಕೊಂಡಿರುವ ಜೆಡಿಎಸ್ ನಾಯಕರು ಅವರುಗಳನ್ನು ರಹಸ್ಯ ಸ್ಥಳದಲ್ಲಿ ಇರಿಸಿದ್ದಾರೆ. ಮೇಯರ್ ಆಯ್ಕೆಗಾಗಿ ಜೆಡಿಎಸ್ ನಿರ್ಣಾಯಕ ಸ್ಥಾನದಲ್ಲಿರುವುದರಿಂದ ತನಗೇ ಆ ಸ್ಥಾನ ಬಿಟ್ಟುಕೊಡಬೇಕೆಂದು ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ. ಇದು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಜೆಡಿಎಸ್ ವರಿಷ್ಠ ದೇವೇಗೌಡರೊಂದಿಗೆ ಮಾತನಾಡಿ ಕಾಂಗ್ರೆಸ್ ಗೆ ಬೆಂಬಲ ನೀಡಲು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರೊಂದಿಗೆ ಮಾತನಾಡಿ ಬೆಂಬಲ ಯಾಚಿಸಿರುವುದಾಗಿ ಹೇಳಲಾಗಿದೆ. ಒಟ್ಟಿನಲ್ಲಿ ಕಲಬುರಗಿ ಮೇಯರ್ -ಉಪ ಮೇಯರ್ ಆಯ್ಕೆಗಾಗಿ ಹಗ್ಗ ಜಗ್ಗಾಟ ಮುಂದುವರೆದಿದ್ದು, ಈ ರಾಜಕೀಯ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.