ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದ ಅತ್ಯುನ್ನತ ಕಾರ್ಯಕಾರಿ ಪ್ರಾಧಿಕಾರವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸಭೆ ಸೇರಲಿದೆ. ಈ ವರ್ಚುವಲ್ ಸಭೆಯು ನಾಳೆ ಸಂಜೆ 4 ಗಂಟೆಯಿಂದ ಆರಂಭಗೊಳ್ಳಲಿದೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚೆ ನಡೆಸುವುದು ಈ ಸಭೆಯ ಪ್ರಮುಖ ಅಜೆಂಡಾವಾಗಿದೆ.
ಪಂಜಾಬ್ನಲ್ಲಿ ಅಧಿಕಾರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಆಮ್ ಆದ್ಮಿ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದೆ. 2017ರಲ್ಲಿ 80 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ ಕೇವಲ 18 ಸೀಟುಗಳನ್ನು ಗೆಲ್ಲಲು ಮಾತ್ರ ಶಕ್ತವಾಗಿದೆ. ಇತ್ತ ಉತ್ತರಾಖಂಡ್, ಮಣಿಪುರ ಹಾಗೂ ಗೋವಾದಲ್ಲಿ ಕಾಂಗ್ರೆಸ್ – ಬಿಜೆಪಿ ನೇರ ಹಣಾಹಣಿ ಇರಲಿದೆ ಎಂದು ನೀರಿಕ್ಷಿಸಲಾಗಿತ್ತಾದರೂ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಸೋತು ಬಿಜೆಪಿಗೆ ಅಧಿಕಾರ ಬಿಟ್ಟುಕೊಟ್ಟಿದೆ.
ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತಿದ್ದೇವೆ. ಇದರಿಂದ ನಾವು ಪಾಠವನ್ನು ಕಲಿಯುತ್ತೇವೆ. ಹಾಗೂ ದೇಶದ ಜನರ ಹಿತಾಸಕ್ತಿಗಾಗಿ ಕೆಲಸ ಮಾಡುವುದನ್ನು ನಾವು ಮುಂದುವರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಪಂಚರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.