ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದಾರೆ. ರಾಜ್ಯದಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದರೆ, ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ ನಡೆಸುತ್ತಿದೆ. ಇನ್ನು ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದು, ಜೊತೆಗೆ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಕಾಂಗ್ರೆಸ್ ಟಿಕೆಟ್ ಕೋರಿ ಹಾಲಿ ಶಾಸಕರುಗಳ ಜೊತೆಗೆ ದೊಡ್ಡ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, 2 ಲಕ್ಷ ರೂಪಾಯಿ ಡಿಡಿ ಯನ್ನು ತಮ್ಮ ಅರ್ಜಿಯೊಂದಿಗೆ ಲಗತ್ತಿಸಿದ್ದಾರೆ. ಅಚ್ಚರಿಯ ಬೆಳವಣಿಗೆ ಒಂದರಲ್ಲಿ ಹೀಗೆ ಟಿಕೆಟ್ ಕೋರಿ 2 ಲಕ್ಷ ರೂಪಾಯಿ ಡಿಡಿಯನ್ನೂ ನೀಡಿದ್ದ ಆಕಾಂಕ್ಷಿಯೊಬ್ಬರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಹೌದು, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸಿ.ಎಂ. ಧನಂಜಯ, ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದರ ಮಧ್ಯೆ ಕಡೂರು ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಅವರು ಕಡೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಸೆಡ್ಡು ಹೊಡೆಯಲು ಜೆಡಿಎಸ್ ನಾಯಕರು, ಧನಂಜಯ ಅವರನ್ನು ಪಕ್ಷಕ್ಕೆ ಕರೆತಂದು ಕಡೂರು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಇದೀಗ ಧನಂಜಯ ಕಡೂರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ ಎನ್ನಲಾಗಿದೆ.