ರಾಜ್ಯದ ಕೆಲ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವರ್ಸಸ್ ಕೇಸರಿ ವಿವಾದ ಈಗ ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ವಿವಾದವನ್ನು ಹಿಡಿದುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ವಾಕ್ಸಮರ ನಡೆಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ನಡುವಿನ ಪೈಪೋಟಿ ಈಗ ರಾಜಕೀಯ ಪಕ್ಷಗಳ ನಾಯಕರ ಕಡೆ ತಿರುಗಿದೆ.
ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರಲು ಯಾವುದೇ ಅಡೆತಡೆಗಳಿಲ್ಲ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಕೀಯ ಕಾರಣಗಳಿಗಾಗಿ ಬಿಜೆಪಿ ನಾಯಕರು ಇದನ್ನು ವಿವಾದವನ್ನಾಗಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ವಕೀಲರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾನೂನಿನ ಅರಿವಿಲ್ಲವೇ ಎಂದು ಪ್ರಶ್ನಿಸಿದ್ದು, ವಸ್ತ್ರ ಸಂಹಿತೆಯನ್ನು ನಿಗದಿಪಡಿಸಿದ ಮೇಲೆ ಅದನ್ನು ಉಲ್ಲಂಘಿಸಿದರೆ ಹೇಗೆ ಎಂದು ಕೇಳಿದ್ದಾರೆ. ಸಚಿವ ಸುನಿಲ್ ಕುಮಾರ್ ಕೂಡ, ಕಾಂಗ್ರೆಸ್ ನಾಯಕರು ವಿವಾದದ ಕಿಡಿಗೆ ತುಪ್ಪ ಸುರಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತ್ರ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದು, ಹಿಜಾಬ್ ಕೇಸರಿ ವಿವಾದದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಿಲ್ಲ. ಇದರ ಮಧ್ಯೆ ಪ್ರಕರಣ ನ್ಯಾಯಾಲಯದಲ್ಲಿದ್ದು ಯಾವ ತೀರ್ಪು ಹೊರಬೀಳಲಿದೆ ಎಂಬುದನ್ನು ಕಾದುನೋಡಬೇಕಿದೆ.