ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಕೆ ಆರ್ ಪೇಟೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆ.ಸಿ. ನಾರಾಯಣಗೌಡ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದವರ ಪೈಕಿ ಒಬ್ಬರಾಗಿದ್ದರು. ನಂತರ ಬಿಜೆಪಿ ಸೇರ್ಪಡೆಗೊಂಡ ಅವರು ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದು, ಪ್ರಸ್ತುತ ಸರ್ಕಾರದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆದರೆ ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡು ಆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಚರ್ಚೆ ಈಗ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಇದಕ್ಕೆ ಕಾರಣವಾಗಿರುವುದು ಇತ್ತೀಚೆಗೆ ಕೆ.ಸಿ. ನಾರಾಯಣಗೌಡ ಅವರು ಆಡಿರುವ ಮಾತು. ಸಮಾರಂಭ ಒಂದರಲ್ಲಿ ಪಾಲ್ಗೊಂಡಿದ್ದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದು, ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಯಾವುದೇ ಟೀಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಕೆ.ಸಿ. ನಾರಾಯಣಗೌಡ ಅವರ ಕಾರ್ಯ ಚಟುವಟಿಕೆಯೂ ಸಹ ಕಾಂಗ್ರೆಸ್ ಸೇರ್ಪಡೆ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡುವಂತಿದೆ. ಕೆ ಆರ್ ಪೇಟೆ ಸೇರಿದಂತೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಬಲವರ್ಧನೆಗೆ ನಾರಾಯಣಗೌಡ ಯಾವುದೇ ಉತ್ಸಾಹ ತೋರುತ್ತಿಲ್ಲ ಎಂಬ ಮಾತುಗಳು ಪಕ್ಷದ ಒಂದು ವಲಯದಿಂದಲೇ ಕೇಳಿ ಬರುತ್ತಿದೆ. ಸ್ಥಾನಮಾನ ನೀಡುವ ವಿಚಾರದಲ್ಲಿ ತಮ್ಮ ಬೆಂಬಲಿಗರಿಗೆ ಪ್ರಾಶಸ್ತ್ಯ ನೀಡುತ್ತಿದ್ದಾರೆ ಎಂಬ ಅಸಮಾಧಾನ ಬಿಜೆಪಿ ಕಾರ್ಯಕರ್ತರಿಗಿದೆ.
ಚುನಾವಣೆ ಘೋಷಣೆಯಾದ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಆರಂಭವಾಗುವುದು ಸಹಜವಾಗಿದ್ದು, ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆಗೊಂಡು ಕಣಕ್ಕಿಳಿಯುತ್ತಾರಾ ಅಥವಾ ಬಿಜೆಪಿಯಿಂದಲೇ ಸ್ಪರ್ಧಿಸುತ್ತಾರಾ ಎಂಬ ಗೊಂದಲಕ್ಕೆ ಆಗ ತೆರೆ ಬೀಳಲಿದೆ.