ಬೆಂಗಳೂರು: ರಾಜ್ಯದಲ್ಲಿ ಮತ್ತೆ ರೈತರ ಆಕ್ರೋಶ ಕಟ್ಟೆಯೊಡೆದಿದ್ದು, ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಹಿಂಪಡೆಯುವಂತೆ ಆಗ್ರಹಿಸಿ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೆಹಲಿ ಪ್ರತಿಭಟನೆ ಬೆಂಬಲಿಸಿ ರಾಜ್ಯದಲ್ಲಿಯೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡ ಕೃಷಿ ಕಾಯ್ದೆ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಹಾಗೂ ಊಟಿ ಹೆದ್ದಾರಿಯನ್ನು ತಡೆಯಲಾಗಿದ್ದು, ಸಂಜೆ 4 ಗಂಟೆಯವರೆಗೆ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು, ಊಟಿ, ಟಿ.ನರಸಿಪುರಗಳಿಗೆ ತೆರಳುವ ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದೆ.
ಇನ್ನೊಂದೆಡೆ ಮಂಡ್ಯ, ರಾಮನಗರ, ಶ್ರೀರಂಗಪಟ್ಟಣದಲ್ಲಿ ರೈತರು ರಸ್ತೆ ತಡೆ ನಡೆಸಿ ಧರಣಿ ನಡೆಸುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮೈಸೂರಿನಲ್ಲಿ ಗೋವುಗಳನ್ನು ರಸ್ತೆಗಳಿಗೆ ತಂದು ರೈತರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯಲ್ಲಿಯೂ ಬೀದಿಗಿಳಿದಿರುವ ರೈತರು ಹಾಗೂ ರೈತ ಮಹಿಳೆಯರು ಹೆದ್ದಾರಿ ತಡೆದು ಬಾರಕೋಲು ಚಳುವಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಹಲವು ರೈತ ಮಹಿಳೆಯರನ್ನು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.