ರಾಜ್ಯ ಸರ್ಕಾರದ ವಿರುದ್ದ ಶೇ.40 ಕಮೀಷನ್ ಆರೋಪ ಪದೇ ಪದೇ ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್, ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡರೆಂದು ಹೇಳಲಾಗುತ್ತಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಳಿಕ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ್ದ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ, ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಕಮೀಷನ್ ದಂಧೆ ಭರ್ಜರಿಯಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದರಲ್ಲದೆ ಸಚಿವ ಸುಧಾಕರ್ ಸೇರಿದಂತೆ ಕೆಲವರ ಹೆಸರು ಹೇಳಿದ್ದರು.
ಇದಾದ ಬಳಿಕ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತರಾಗಿದ್ದು, ಅವರ ಕುಮ್ಮಕ್ಕಿನಿಂದಲೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ಮುಖಂಡರಿಂದ ಕೇಳಿ ಬಂದಿತ್ತು.
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಡಿ.ಕೆ. ಶಿವಕುಮಾರ್, ಕೆಂಪಣ್ಣ ಯಾರೆಂಬುದೇ ನನಗೆ ಗೊತ್ತಿಲ್ಲ. ಆದರೆ ಅವರು ವ್ಯವಸ್ಥೆಯನ್ನು ಸ್ವಚ್ಚ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತಂತೆ ಕೇಳಿದ ಪ್ರಶ್ನೆಗೆ ಅವರ ಬಗ್ಗೆ ಮಾತನಾಡಿ ಬಾಯಿ ಹೊಲಸು ಮಾಡಿಕೊಳ್ಳಲ್ಲ ಎಂದು ಡಿಕೆಶಿ ಮಾರ್ಮಿಕವಾಗಿ ಹೇಳಿದ್ದಾರೆ.