ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಆಘಾತವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
ಧ್ರುವನಾರಾಯಣ ಅವರಿಗೆ ಇದ್ದಕ್ಕಿದ್ದಂತೆ ರಕ್ತವಾಂತಿ ಆರಂಭವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವದಿಂದ ಕೋಮಾಸ್ಥಿತಿ ತಲುಪಿದ್ದರು ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಧ್ರುವನಾರಾಯಣ ಅವರು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡಿದ್ದ ಡಾ.ಮಂಜುನಾಥ್ ತಿಳಿಸಿದ್ದಾರೆ.
ಕುಟುಂಬದವರು ಹೇಳುವ ಪ್ರಕಾರ ಧ್ರುವನಾರಾಯಣ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಹೃದಯಾಘಾತ, ರಕ್ತವಾಂತಿಯಿಂದ ಮೃತಪಟ್ಟಿರುವುದು ಕುಟುಂಬದವರಿಗೆ ಬರಸಿಡಿಲು ಬಡಿದಂತಾಗಿದೆ.
1983ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಎರಡು ಬಾರಿ ಸಂಸದರಾಗಿ ಹಾಗೂ ಕೊಳ್ಳೆಗಾಲ ಕ್ಷೇತ್ರದಿಂದ 2 ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಧ್ರುವನಾರಾಯಣ ಸಿದ್ಧತೆ ನಡೆಸಿದ್ದರು.