ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕೊನೇ ಕ್ಷಣದಲ್ಲಿ ರೋಚಕ ತಿರುವು ಪಡೆಯುತ್ತಿದ್ದು, ಇನ್ನೇನು ಮಾಜಿ ಸಿಎಂ ಸಿದ್ದರಾಮಯ್ಯ ಹೆಸರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಘೋಷಣೆ ಮಾಡಬೇಕು ಎಂಬ ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮತಿ ಸೂಚಿಸಿಲ್ಲ ಎಂದು ಹೇಳಲಾಗುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಹಂಚಿಕೆ ಸೂತ್ರ ಹೆಣೆಯಲು ತೀರ್ಮಾನಿಸಿದ್ದರು. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೂ ಚರ್ಚಿಸಿ, ಒಪ್ಪಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದರು. ಆದರೆ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆಗೆ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.
ಮೊದಲೆಡು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ, ನಂತರದ ಮೂರು ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂಬ ವಿಚಾರ ಮುಂದಿಡಲಾಗಿತ್ತು. ಆದರೆ ಹೈಕಮಾಂಡ್ ಷರತ್ತಿಗೆ ಒಪ್ಪದ ಡಿ.ಕೆ.ಶಿವಕುಮಾರ್, ಆರಂಭದಲ್ಲಿಯೇ ತಮಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಖರ್ಗೆ ಅವರ ಬಳಿಯೂ ಡಿ.ಕೆ.ಶಿವಕುಮಾರ್ ಇದೇ ವಿಚಾರ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಕಸರತ್ತು ಸಧ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಂಡುಬರುತ್ತಿಲ್ಲ.