ಕೊರೊನಾ ಹೆಮ್ಮಾರಿಗೆ ಬಲಿಯಾಗಿರುವ ವ್ಯಕ್ತಿಯ ಕುಟುಂಬಸ್ಥರಿಗೆ 1.5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಪರಿಹಾರದಲ್ಲಿ ಕೇಂದ್ರ ಸರ್ಕಾರವು 50 ಸಾವಿರ ರೂಪಾಯಿ ಹಾಗೂ ರಾಜ್ಯ ಸರ್ಕಾರ 1 ಲಕ್ಷ ರೂಪಾಯಿ ಪರಿಹಾರವಾಗಿ ನೀಡುತ್ತವೆ. ಹೀಗಾಗಿ ಎಲ್ಲ ಮೊತ್ತ ಸೇರಿಸಿ ಕೊರೊನಾದಿಂದಾಗಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 1.5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಬಿಪಿಎಲ್ ಕಾರ್ಡ್ ಹೊಂದಿದ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದರೆ ಮಾತ್ರ ಪರಿಹಾರ ನೀಡಲಾಗುತ್ತಿದೆ. ಆದರೆ, ಹಲವರು ಎಪಿಎಲ್ ಕಾರ್ಡ್ ಇದ್ದವರಿಗೂ ಪರಿಹಾರ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ. ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಮಳೆಯಿಂದ ಸಂಕಷ್ಟ ಅನುಭವಿಸಿದ ಸುಮಾರು 15.45 ಲಕ್ಷ ರೈತರಿಗೆ 1,100 ಕೋಟಿ ರೂಪಾಯಿ ಪರಿಹಾರ ಹಾಕಲಾಗಿದೆ. ಅಲ್ಲದೇ ಮುಂದಿನ ತಿಂಗಳು ರೈತರ ಮನೆಗೆ ಆರ್ ಟಿ ಸಿ ಹಾಗೂ ಪಹಣಿಯನ್ನು ಉಚಿತವಾಗಿ ತಲುಪಿಸಲಾಗುವುದು ಎಂದು ಹೇಳಿದ್ದಾರೆ.