ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಕೊರೊನಾ ನಿಯಂತ್ರಣದ ಕುರಿತು ಹಾಗೂ ನಿಯಂತ್ರಣ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಡಿ.ಕೆ. ಸುಧಾಕರ್ ಹೇಳಿದ್ದಾರೆ.
ಸರ್ಕಾರವು ಜನರ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಕ್ರಮಗಳನ್ನು ಜರುಗಿಸುತ್ತದೆ. ಜನರು ಈ ನಿಯಮಗಳನ್ನು ಪಾಲಿಸಬೇಕು. ಆದರೆ, ಲಾಕ್ ಡೌನ್ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಈಗಷ್ಟೇ ಜನ – ಜೀವನ ಸಹಜ ಸ್ಥಿತಿಗೆ ಬಂದಿದೆ. ಈ ಸಂದರ್ಭದಲ್ಲಿ ಲಾಕ್ ಡೌನ್ ಮಾಡಿದರೆ, ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಹೀಗಾಗಿ ಲಾಕ್ ಡೌನ್ ಕುರಿತು ಸರ್ಕಾರದ ಮುಂದೆ ಯಾವುದೇ ವಿಚಾರ ಇಲ್ಲ ಎಂದು ಹೇಳಿದ್ದಾರೆ.
ಆದರೆ, ಸೋಂಕು ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕಟ್ಟುನಿಟ್ಟಾಗಿ ಈ ನಿಯಮಗಳನ್ನು ಜನರು ಪಾಲಿಸಬೇಕು. ಆಗ ಮಾತ್ರ ಕೊರೊನಾ ತೊಲಗಿಸಲು ಸಾಧ್ಯ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದೆ. ಹೀಗಾಗಿ ಬೆಂಗಳೂರು ನಗರದಲ್ಲಿ ಹೆಚ್ಚಿನ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಎರಡನೇ ಅಲೆಯ ಸಂದರ್ಭದಲ್ಲಿಯೂ ಬೆಂಗಳೂರಿನಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದ್ದವು. ಈ ಸಂದರ್ಭದಲ್ಲಿಯೂ ಸೋಂಕಿತರ ಸಂಖ್ಯೆ ಇಲ್ಲಿಯೇ ಹೆಚ್ಚಾಗಿ ದಾಖಲಾಗುತ್ತಿವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನ ಮೇಕೆದಾಟು ಹೋರಾಟದ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಪಾದಯಾತ್ರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ಜನರು ಹೆಚ್ಚಾಗಿ ಆಗಮಿಸುವುದರಿಂದಾಗಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಒಂದು ವೇಳೆ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಅದರ ಜವಾಬ್ದಾರಿಯನ್ನು ಕಾಂಗ್ರೆಸ್ ನಾಯಕರೇ ಹೊರಬೇಕು ಎಂದು ಹೇಳಿದ್ದಾರೆ.