ನ್ಯಾಯಾಂಗ ನೇಮಕಾತಿ ಕುರಿತಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ತಿಕ್ಕಾಟ ನಡೆಯುತ್ತಿದ್ದು, ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರತಿಪಾದಿಸುತ್ತಿದ್ದಾರೆ. ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳುತ್ತಿಲ್ಲ.
ಇದರ ಮಧ್ಯೆ ಈ ವಿಷಯ ಕುರಿತಂತೆ ಪ್ರತಿಕ್ರಿಯಿಸಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ನೇಮಕಕ್ಕೆ ನನ್ನ ವಿರೋಧವಿದೆ ಎಂದಿದ್ದಾರೆ. ಅಲ್ಲದೆ ಈ ಬೆಳವಣಿಗೆ ಹಿಂದೆ ನ್ಯಾಯಾಂಗ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ತನ್ನ ಸ್ವಾಧೀನಕ್ಕೆ ಪಡೆಯುವ ಉದ್ದೇಶವಿರುವಂತೆ ಕಾಣುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಒಬ್ಬ ಮುಖ್ಯಮಂತ್ರಿಯಾದವರು ತನ್ನ ಮಂತ್ರಿಮಂಡಲಕ್ಕೆ ಅರ್ಹ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಲು ಬಯಸುತ್ತಾರೋ ಅದೇ ರೀತಿ ಒಬ್ಬ ನ್ಯಾಯಮೂರ್ತಿಯನ್ನು ನೇಮಕಾತಿ ಮಾಡಿಕೊಳ್ಳಲು ಕೊಲಿಜಿಯಂ ಚಿಂತನೆ ನಡೆಸುತ್ತದೆ. ಕೊಲಿಜಿಯಂ ಶಿಫಾರಸು ಮಾಡಿದ ಹೆಸರನ್ನು ವೈಯಕ್ತಿಕ ಕಾರಣ ನೀಡಿ ಕೇಂದ್ರ ಸರ್ಕಾರ ನಿರಾಕರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.