ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಈ ಬಾರಿ ಅಧಿಕಾರಕ್ಕೆ ಏರಲೇಬೇಕು ಎಂಬ ಕಾರಣಕ್ಕೆ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಟ್ಟಾಗಿಯೇ ಪ್ರಚಾರ ಕಾರ್ಯ ನಡೆಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೋರಿ ದೊಡ್ಡ ಪ್ರಮಾಣದಲ್ಲಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಇದರ ಮಧ್ಯೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಛತ್ತೀಸ್ಗಡದ ರಾಯಪುರಕ್ಕೆ ತೆರಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸುಮಾರು 45 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆಸಿರುವುದು ಕೈ ಪಾಳೆಯದಲ್ಲಿ ಕುತೂಹಲ ಹೆಚ್ಚಿಸಿದೆ.
ಈ ಇಬ್ಬರು ನಾಯಕರು ಒಂದೇ ಹೋಟೆಲ್ ನಲ್ಲಿ ಪರಸ್ಪರ ಎದುರಿಗಿನ ಕೊಠಡಿಗಳಲ್ಲಿ ತಂಗಿದ್ದಾರೆ ಎಂದು ಹೇಳಲಾಗಿದ್ದು, ಶನಿವಾರ ರಾತ್ರಿ ಮಲ್ಲಿಕಾರ್ಜುನ ಖರ್ಗೆ ಅವರ ರೂಮಿಗೆ ತೆರಳಿದ ಸಿದ್ದರಾಮಯ್ಯನವರು ಚರ್ಚೆ ನಡೆಸಿದ್ದಾರೆ. ಟಿಕೆಟ್ ನೀಡುವ ಕುರಿತಂತೆ ಈ ಇಬ್ಬರು ನಾಯಕರ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದ್ದು, ಸದ್ಯದಲ್ಲಿಯೇ ಮೊದಲ ಪಟ್ಟಿ ಹೊರ ಬೀಳುವ ನಿರೀಕ್ಷೆ ಇದೆ.