ಉದ್ಯೋಗ ಖಾಯಂ ಆಗುವ ನಿರೀಕ್ಷೆಯಲ್ಲಿದ್ದ ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶಾಕ್ ನೀಡಿದ್ದಾರೆ. ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆ ನೌಕರರನ್ನು ಖಾಯಂ ಮಾಡದಿದ್ದರೂ ಸಹ ಒಂದು ವೇಳೆ ಯಾರಾದರೂ ಕೋವಿಡ್ ನಿಂದ ಮೃತಪಟ್ಟರೆ ಅಂಥವರ ಕುಟುಂಬಗಳಿಗೆ ಮೂವತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಈವರೆಗೆ 186 ಮಂದಿ ನೌಕರರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದು, ಅಂಥವರ ಕುಟುಂಬಗಳಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.