ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಕರ್ನಾಟಕದ ಗಡಿಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಡೆಯುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂಬ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ನಡೆಯುತ್ತಿದ್ದು, ಅವರ ರಾಜಕೀಯ ಉಳಿವಿಗಾಗಿ ಇಂತಹ ಮಾತುಗಳನ್ನು ಆಡುತ್ತಿದ್ದಾರೆ. ಅವರು ಇಂತಹ ವರ್ತನೆಗಳನ್ನು ಬಿಡಬೇಕು ಎಂದು ಹೇಳಿದ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರದಲ್ಲಿ ಕನ್ನಡ ಮಾತನಾಡುವ ಹಲವು ಪ್ರದೇಶಗಳಿದ್ದು, ಅವುಗಳ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.