ಆಷಾಢ ಮಾಸ ಆರಂಭವಾಗುತ್ತಿದ್ದು, ಚಾಮುಂಡಿ ಬೆಟ್ಟಕ್ಕೆ ಶುಕ್ರವಾರ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ, ಬಹುತೇಕ ಭಕ್ತರು ತಮ್ಮ ಸ್ವಂತ ವಾಹನಗಳಲ್ಲಿ ಆಗಮಿಸುವುದರಿಂದ ದಟ್ಟಣೆ ಉಂಟಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ.
ಈ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ನೀಗಿಸಲು ಆಷಾಢ ಮಾಸದ ಶುಕ್ರವಾರಗಳಂದು ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಪ್ರತಿ ಶುಕ್ರವಾರ ಸರ್ಕಾರಿ ಬಸ್ ಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದು ಸೋಮಶೇಖರ್ ತಿಳಿಸಿದ್ದಾರೆ. ಲಲಿತ್ ಮಹಲ್ ಪಕ್ಕದಲ್ಲಿರುವ 18 ಎಕರೆ ಪ್ರದೇಶದಿಂದ ಬಸ್ ಗಳು ಸಂಚರಿಸಲಿವೆ. ಭಕ್ತರ ಅನುಕೂಲಕ್ಕಾಗಿ 50 ಬಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ಮೈಸೂರು ನಗರದ ನಾನಾ ಭಾಗಗಳಿಂದ ಕೂಡ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಬೆಟ್ಟಕ್ಕೆ ಆಗಮಿಸುವವರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಅಥವಾ 72 ಗಂಟೆಗಳ ಮುಂಚಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಬಸ್ ನಿಲ್ದಾಣ, ಪಾರ್ಕಿಂಗ್ ಸ್ಥಳ ಸೇರಿದಂತೆ ನಾನಾ ಕಡೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಪರಿಶೀಲಿಸಲಿದ್ದಾರೆ ಎಂದರು.
ಬೆಳಗ್ಗೆ 5.30 ರಿಂದ ರಾತ್ರಿ 8.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.