ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಹಾಗು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ತಿಳಿಸಲಾಗಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ.