ಬೆಂಗಳೂರು: ಮನೆ ಯಜಮಾನಿಗೆ ಮಾಸಿಕ 2000 ರೂ. ಸಹಾಯಧನ ಗೃಹಲಕ್ಷ್ಮೀ ಯೋಜನೆಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಈ ನಡುವೆ ನಕಲಿ ಅರ್ಜಿಗಳು, ಆಪ್ ಗಳು ಹೆಚ್ಚುತ್ತಿರುವ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ಇನ್ನೂ ಯಾವುದೇ ಅರ್ಜಿ ಬಿಡುಗಡೆ ಮಾಡಿಲ್ಲ. ಯೋಜನೆಗೆ ಸಂಬಂಧಿಸಿದ ಹಲವು ನಕಲಿ ಅರ್ಜಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಲ್ಲದೇ ನಕಲಿ ಆಪ್ ಗಳು ಕೂಡ ಪತ್ತೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಸಾರ್ವಜನಿಕರು ಇವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ನಕಲಿ ಅರ್ಜಿ, ಆಪ್ ಗಳ ಮೂಲಕ ಕಿಡಿಗೇಡಿಗಳು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ತಿಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವವರು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ಅರ್ಜಿ ಸಲ್ಲಿಕೆ ಹಾಗೂ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.