ಗೌರವ ಧನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಗೌರವ ದಿನ ಹೆಚ್ಚಳ ಕುರಿತಂತೆ ಈ ಬಜೆಟ್ ನಲ್ಲಿಯೇ ಘೋಷಿಸುವ ನಿಟ್ಟಿನಲ್ಲಿ ತಾವು ಪ್ರಯತ್ನ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದ್ದಾರೆ.
ಮಂಗಳವಾರದಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಜೆಟ್ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ವೇಳೆ ಗೌರವ ಧನವನ್ನು 2,000 ರೂಪಾಯಿಗಳಿಗೆ ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ಮಂಡಿಸಿದ ಮೊದಲ ಬಜೆಟ್ ನಲ್ಲಿ ಗೌರವ ಧನವನ್ನು ಒಂದು ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದ್ದಾರೆ. ಈ ಬಾರಿಯೂ ಕೂಡ ಆಶಾ ಕಾರ್ಯಕರ್ತೆಯರ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಸಚಿವ ಸುಧಾಕರ್ ಹೇಳಿದರು.