ನೆರೆಯ ಚೀನಾದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಲರ್ಟ್ ಆಗಿದೆ. ಕೋವಿಡ್ ಇನ್ನೂ ಮುಗಿದಿಲ್ಲ, ಹೀಗಾಗಿ ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕೆಂದು ತಿಳಿಸಿದೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ದೇಶದಲ್ಲಿ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಿದರು.
ವಿಶ್ವದ ಕೆಲವು ಭಾಗಗಳಲ್ಲಿ ಹಠಾತ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯಗಳು ಜಾಗರೂಕವಾಗಿ ಇರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಇಂದು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಕೋವಿಡ್ ಇನ್ನೂ ಮುಗಿದಿಲ್ಲ. ನಾನು ಎಲ್ಲರನ್ನು ಎಚ್ಚರದಿಂದಿರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಮಾಂಡವಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಆರೋಗ್ಯ ಕಾರ್ಯದರ್ಶಿಗಳು, ಔಷಧೀಯ ಇಲಾಖೆ, ಜೈವಿಕ ತಂತ್ರಜ್ಞಾನ ಇಲಾಖೆ, ಆಯುಷ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮಹಾನಿರ್ದೇಶಕ ರಾಜೀವ್ ಬಹ್ಲ್, NITI ಆಯೋಗ್‌ನ ಸದಸ್ಯ (ಆರೋಗ್ಯ) ಡಾ ವಿ ಕೆ ಪಾಲ್ ಮತ್ತು ರೋಗನಿರೋಧಕ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (NTAGI) ಅಧ್ಯಕ್ಷ ಡಾ. ಎನ್ ಕೆ ಅರೋರಾ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಜಪಾನ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೋವಿಡ್‌ನ ರೂಪಾಂತರ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಹೆಚ್ಚಳ ಮಾಡಲು ಒತ್ತಾಯಿಸಿದೆ.