ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಅವಕಾಶ ನಿರಾಕರಿಸಿದ ಕಾರಣಕ್ಕೆ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡು ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಶೆಟ್ಟರ್ ಗೆಲುವು ಸಾಧಿಸಿದ್ದರೆ ಅವರು ಸಚಿವರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಲಿಂಗಾಯತ ಮತಗಳು ಪಕ್ಷಕ್ಕೆ ಲಭಿಸಿದ್ದು, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ವಾದವೂ ಕೇಳಿ ಬಂದಿತ್ತು.
ಇದೀಗ ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಸೋಮವಾರದಂದು ಭೇಟಿ ನೀಡಿದ್ದ ಸಚಿವ ಎಂ.ಬಿ. ಪಾಟೀಲ್, ವೀರೇಂದ್ರ ಪಾಟೀಲ್ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಖಂಡಿತವಾಗಿಯೂ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಹೇಳಿದ್ದಾರೆ.