ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ಗುಂಡ್ಲುಪೇಟೆಯಲ್ಲಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಜನಪರ ಧ್ವನಿಯಾಗಲು ಪಾದಯಾತ್ರೆ ಬಿಟ್ಟು ಅನ್ಯ ಮಾರ್ಗವೇ ಇಲ್ಲ ಎಂದು ಅವರು ಹೇಳಿದ್ದಾರೆ.
ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಸಿಗುತ್ತಿಲ್ಲ, ಮಾಧ್ಯಮಗಳು ಸಂಪೂರ್ಣವಾಗಿ ಸರ್ಕಾರದ ನಿಯಂತ್ರಣದಲ್ಲಿವೆ. ಲೋಕಸಭೆಯಲ್ಲಿ ಹಾಗೂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರತಿಪಕ್ಷಗಳಿಗೆ ಮಾತನಾಡಲು ಬಿಡುತ್ತಿಲ್ಲ. ಹೀಗಾಗಿ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ರಾಹುಲ್ ಗಾಂಧಿ ತಿಳಿಸಿದರು.
ಬಿಜೆಪಿ, ಆರ್ ಎಸ್ ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಕೋಮು ಹಿಂಸೆ ಹೆಚ್ಚಾಗಿದೆ. ರಾಷ್ಟ್ರಧ್ವಜಕ್ಕೆ ಬೆಲೆಯೇ ಇಲ್ಲದಂತಾಗಿದ್ದು, ಇಂತಹ ಸಂದರ್ಭದಲ್ಲಿ ಸಂವಿಧಾನವನ್ನು ರಕ್ಷಿಸಬೇಕಾದ ಹೊಣೆ ನಮ್ಮ ಮೇಲಿದೆ ಎಂದು ಹೇಳಿದ ರಾಹುಲ್ ಗಾಂಧಿ, ಯಾತ್ರೆಯಲ್ಲಿ ಯಾರಾದರೂ ಎಡವಿ ಬಿದ್ದರೆ ಉಳಿದವರು ಮೇಲಕ್ಕೆತ್ತುತ್ತಾರೆ. ಬಿದ್ದವನದು ಯಾವ ಜಾತಿ, ಧರ್ಮ, ಭಾಷೆ ಎಂದು ಯಾರೂ ಕೇಳುವುದಿಲ್ಲ ಎಂದರು.