ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ಜನವರಿ ಅಂತ್ಯದವರೆಗೂ 144 ಸೆಕ್ಷನ್ ಜಾರಿಯಲ್ಲಿರಲಿದೆ. ರಾತ್ರಿ ಮಾತ್ರವಲ್ಲ ಹಗಲಿನಲ್ಲಿಯೂ 144 ಸೆಕ್ಷನ್ ಜಾರಿಯಲ್ಲಿರಲಿದ್ದು, 5ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜನವರಿ 31ರವರೆಗೂ ಯಾವುದೇ ಸಭೆ, ಸಮಾರಂಭ, ರ್ಯಾಲಿ, ಪ್ರತಿಭಟನೆ ಮಾಡಲು ಅವಕಾಶವಿಲ್ಲ, ಅಲ್ಲದೇ ಜನ ಗುಂಪು ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘನೆಯಾದರೆ ಎನ್ ಡಿ ಎಂ ಎ ಆಕ್ಟ್ ನಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.