ಉತ್ತರ ದೆಹಲಿಯ ಜಹಾಂಗೀರ್ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆದಿತ್ತು. ಇದರಿಂದ ಜಹಾಂಗೀರ್ ಪುರಿಯ ಗಲಭೆಕೋರರಿಗೆ ಸೇರಿದ ಕಟ್ಟಡಗಳನ್ನು ತೆರವು ಗೊಳಿಸುವಂತೆ ಕೋರಿ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಮೇಯರ್ ರಾಜ ಇಕ್ಬಾಲ್ ಸಿಂಗ್ ಅವರಿಗೆ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಪತ್ರ ಬರೆದಿದ್ದರು. ಗಲಭೆಕೋರರಿಗೆ ಶಾಸಕರ ಬೆಂಬಲ ಇರುವುದಾಗಿ ಗುಪ್ತಾ ಆರೋಪಿಸಿದ್ದರು. ಇದರ ಬೆನ್ನಲ್ಲೇ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ್ದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.
ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 400 ಜನ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಎನ್ ಡಿ ಎಂ ಸಿ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಮನವಿ ಸಲ್ಲಿಸಿದ್ದರು.
ತೆರವು ಕಾರ್ಯಾಚರಣೆಗೆ ಬುಲ್ಡೋಜರ್ ಗಳನ್ನು ಬಳಸಲಾಗಿದ್ದು ಸುಪ್ರೀಂಕೋರ್ಟ್ ಆದೇಶದಂತೆ ಇದೀಗ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ 15 ವರ್ಷಗಳಿಂದ ಅಕ್ರಮ ಕಟ್ಟಡಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎರಡು ಸಮುದಾಯಗಳ ನಡುವಿನ ಹಿಂಸಾಚಾರದ ನಂತರ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯರು ಕಣ್ಣೀರು ಹಾಕಿದ್ದಾರೆ.
ಜಹಾಂಗೀರ್ ಪುರಿಯಲ್ಲಿ ಶನಿವಾರ ನಡೆದ ಹಿಂಸಾಚಾರದಲ್ಲಿ 8 ಪೊಲೀಸರು ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದರು. ಪ್ರಕರಣದ ಸಂಬಂಧ ದೆಹಲಿ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 23 ಜನರನ್ನು ಇದುವರೆಗೂ ಬಂಧಿಸಿದ್ದಾರೆ. ಮೊಹಮ್ಮದ್ ಆನ್ಸರ್ ಹಿಂಸಾಚಾರದ ಪ್ರಮುಖ ಎಂದು ಆರೋಪಿಸಲಾಗಿದೆ. ಇದೇ ವೇಳೆ ಸೋನು ಎಂಬ ವ್ಯಕ್ತಿ ಪಿಸ್ತೂಲಿನಿಂದ ಗುಂಡು ಹಾರಿಸಿರುವುದು ವಿಡಿಯೋ ದಲ್ಲಿ ದಾಖಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.