ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿರುವುದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಪ್ರತಿಮೆ ನಿರ್ಮಿಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರಿಟಿಷರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಡಿದ್ದಾನೆ. ಬಿಜೆಪಿಯವರು ಇತಿಹಾಸ ತಿರುಚಲು ಮುಂದಾಗಿದ್ದಾರೆ. ಯಾರಾದರೂ ಟಿಪ್ಪು ಪ್ರತಿಮೆ ಸ್ಥಾಪಿಸುತ್ತೇವೆ ಎಂದರೆ ಅದಕ್ಕೆ ವಿರೋಧ ಯಾಕೆ ವ್ಯಕ್ತಪಡಿಸಬೇಕು ಎಂದಿದ್ದಾರೆ.
ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮಾತನಾಡಿ, ಟಿಪ್ಪು ಸುಲ್ತಾನ್, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಇವರೆಲ್ಲರೂ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಅವರ ಪ್ರತಿಮೆ ನಿರ್ಮಿಸಲು ಯಾರೂ ಕೂಡ ವಿರೋಧ ವ್ಯಕ್ತಪಡಿಸಬಾರದು ಎಂದು ಹೇಳಿದರು.
ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸಿದರೆ ಅದನ್ನು ಧ್ವಂಸ ಮಾಡುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿರುವ ಕುರಿತಂತೆ ಪ್ರತಿಕ್ರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲ ವರ್ಗದವರ ರಕ್ಷಣೆ ಮಾಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿರುತ್ತಾರೆ. ಇದಕ್ಕೆ ಅವರೇ ಉತ್ತರ ನೀಡಬೇಕು ಎಂದು ಹೇಳಿದರು.