ರೈತರ ಮಕ್ಕಳಿಗಾಗಿ ರಾಜ್ಯ ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಟೈಲರ್ ಮಕ್ಕಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಭಾನುವಾರದಂದು ಕೊಪ್ಪದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ವಿದ್ಯಾನಿಧಿ ಯೋಜನೆಯನ್ನು ಟೈಲರ್ ಮಕ್ಕಳಿಗೂ ವಿಸ್ತರಿಸುವಂತೆ ಮನವಿ ಬಂದಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಆನೆ ಉಪಟಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರ ನಿಯಂತ್ರಣಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಅಲ್ಲದೆ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೀಡುವ ಪರಿಹಾರವನ್ನು 7.50 ಲಕ್ಷದಿಂದ 15 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.