ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆದಾಗ್ಯೂ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂ ವಿಸ್ತರಣೆ ಬಗ್ಗೆ ಇದೀಗ ರಾಜ್ಯ ಸರ್ಕಾರವೇ ಗೊಂದಲಕ್ಕೀಡಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕರ್ಫ್ಯೂ ವಿಸ್ತರಣೆ ಬಗ್ಗೆ ಬಿಜೆಪಿ ನಾಯಕರು, ಉದ್ಯಮಿಗಳು, ಗ್ರಾಹಕರಿಂದಲೂ ವಿರೋಧ ವ್ಯಕ್ತವಾಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಕೋವಿಡ್ ಕೇಸ್ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಜನರ ಆರೋಗ್ಯದ ದೃಷ್ಠಿಯಿಂದ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಜನರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಜನರ ಆರೋಗ್ಯ ಮುಖ್ಯ. ಜನರ ಹಿತದೃಷ್ಠಿಯಿಂದ ವೈಜ್ಞಾನಿಕ ನೆಲೆಗಟ್ಟಿನಲ್ಲಿ ನಾಳೆ ನಡೆಯುವ ಸಭೆಯಲ್ಲಿ ಚರ್ಚಿಸುತ್ತೇವೆ. ಕೋವಿಡ್ ಅಂಕಿ-ಅಂಶ ಪರಿಶೀಲಿಸಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.