ಬೆಂಗಳೂರು: ನಿರ್ದೇಶಕ ಎಸ್.ನಾರಾಯಣ್ ರಾಜಕೀಯ ರಂಗ ಪ್ರವೇಶಕ್ಕೆ ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ನಮ್ಮ ಪಕ್ಷದ ಸಿದ್ಧಾಂತ, ಆದರ್ಶಗಳಿಂದ ಪ್ರೇರಿತರಾದ ಎಸ್.ನಾರಾಯಣ್ ಇಂದು ತಮ್ಮನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಅಭಿಲಾಷೆ ವ್ಯಕ್ತಪಡಿಸಿದರು. ಈ ವಿಚಾರವಾಗಿ ಸಾಕಷ್ಟು ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲಿಯೇ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಎಸ್.ನಾರಾಯಣ್, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದು, ಕಲಾ ಸಾಮ್ರಾಟ್ ಕಾಂಗ್ರೆಸ್ ಸೇರುವುದು ಖಚಿತ ಎನ್ನಲಾಗಿದೆ.