ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾತನಾಡಿದ ಕುಮಾರಸ್ವಾಮಿ, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ಬೇಡಿದ್ದೇನೆ ಎಂದರು.
ಉಚಿತ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು, ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನು ಸ್ವೀಕರಿಸಿದ್ದೇನೆ. ಜನರಿಗೆ ಉತ್ತಮ ಬದುಕು ಕಟ್ಟಿಕೊಡುತ್ತೇನೆ. ಅಂತಹ ಸರ್ಕಾರ ಅಧಿಕಾರಕ್ಕೆ ತರುತ್ತೇವೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ ಎಂದು ಹೇಳಿದರು.
123 ಸ್ಥಾನ ಪಡೆಯುವುದು ನನ್ನ ಗುರಿ. ಇಂದಿನ ಜೆಡಿಎಸ್ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪಂಚರತ್ನ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡುತ್ತೇನೆ. ಎಲ್ಲಾ ಪಕ್ಷದವರಲ್ಲಿ ಮೈತ್ರಿ ಸರ್ಕಾರ ಬರುತ್ತೆ ಎಂಬ ನಿಲುವು ಇದೆ. ಆದರೆ ಜೆಡಿಎಸ್ ಪೂರ್ಣ ಪ್ರಮಾಣದ ಸರ್ಕಾರ ರಚಿಸಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಯವರು ಜೆಡಿಎಸ್ ಬಗ್ಗೆ ಚಕಾರ ಎತ್ತುತ್ತಿಲ್ಲ ಏಕೆಂದರೆ ಮುಂದೆ ಮೈತ್ರಿ ಸರ್ಕಾರದ ಅನಿವಾರ್ಯ ಪರಿಸ್ಥಿತಿ ಬಂದರೆ ಅನುಕೂಲ ಆಗುತ್ತದೆಂದು ಯಾರೂ ಟೀಕೆ ಮಾಡುತ್ತಿಲ್ಲ ಎಂದು ಹೇಳಿದರು.
ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಕುಮಾರಸ್ವಾಮಿ, ನಿಖಿಲ್ ಜೆಡಿಎಸ್ ಪಕ್ಷದ ಶಾಸಕರ 126 ಸ್ಥಾನ ಗೆಲ್ಲಿಸಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಆದರೆ 126 ರಲ್ಲಿ ನಿಖಿಲ್ ಅವರು ಇರಬಹುದು ಎಂದು ವಿಧಾನಸಭೆ ಚುನಾವಣೆಗೆ ನಿಖಿಲ್ ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.