ಬೆಳಗಾವಿ: ಜಿಲ್ಲೆಯಲ್ಲಿನ ಬಿಜೆಪಿ ಪಾಳಯದಲ್ಲಿ ಕಂಡು ಬರುತ್ತಿರುವ ಜಾರಕಿಹೊಳಿ ಬ್ರದರ್ಸ್ ಹಾಗೂ ಇನ್ನುಳಿದ ನಾಯಕರ ನಡುವಿನ ಭಿನ್ನಮತ ಸಿಎಂ ಅಂಗಳಕ್ಕೆ ತಲುಪಿದೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬೆಳಗಾವಿಯ ನಾಯಕರು ಭೇಟಿಯಾಗಿ ಸಮಸ್ಯೆಗಳನ್ನು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬೆಂಗಳೂರಿಗೆ ಆಗಮಿಸಿದ್ದು, ಉಮೇಶ್ ಕತ್ತಿ ಹಾಗೂ ಇನ್ನಿತರ ಮುಖಂಡರು ಕೂಡ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ 2ಕ್ಕೆ ಸಿಎಂ ಅವರೊಂದಿಗೆ ಚರ್ಚೆ ನಡೆಯಲಿದ್ದು, ಬೆಳಗಾವಿ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.
ಈ ಸಭೆಗೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿಗೆ ಆಹ್ವಾನ ನೀಡಿಲ್ಲ. ಜಾರಕಿಹೊಳಿ ಬ್ರದರ್ಸ್ ಹಾಗೂ ಇನ್ನಿತರ ನಾಯಕರು ಎಂಬಂತೆ ಬೆಳಗಾವಿಯಲ್ಲಿ ಬಿಜೆಪಿಯ ಪರಿಸ್ಥಿತಿಯಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆಯಾಗುತ್ತಿದ್ದು, ಹಲವಾರು ಸಮಸ್ಯೆಗಳು ಜಿಲ್ಲೆಯಲ್ಲಿ ಸ್ಫೋಟವಾಗುತ್ತಲೇ ಇವೆ. ಈ ನಿಟ್ಟಿನಲ್ಲಿ ಬೆಳಗಾವಿ ಬಿಜೆಪಿ ಬೂದಿ ಮುಚ್ಚಿದ ಕೆಂಡದಂತಿದೆ.
ಇತ್ತೀಚೆಗಷ್ಟೇ ಸಮಸ್ಯೆಗಳಿದ್ದಲ್ಲಿ ಜಿಲ್ಲೆಯಲ್ಲಿಯೇ ಬಗೆಹರಿಸಿಕೊಳ್ಳೋಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು. ಇದರ ಮಧ್ಯೆಯೇ ಉಮೇಶ್ ಕತ್ತಿ ಅವರು ಸಿಎಂ ಭೇಟಿಗೆ ನಿಯೋಗ ಕರೆದೊಯ್ದಿದ್ದಾರೆ.