ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಅಸ್ತ್ರ ಪ್ರಯೋಗಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೇ 9221 ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಲಾಕ್ ಆಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಸಿಎಂ ಸಂಪರ್ಕದಲ್ಲಿದ್ದ ಆರೋಗ್ಯ ಸಚಿವ ಸುಧಾಕರ್ ಮುಂಜಾಗೃತಾ ಕ್ರಮವಾಗಿ ಕ್ವಾರಂಟೈನ್ ಆಗಿದ್ದಾರೆ. ಈ ನಡುವೆ ಸಚಿವರು ಆರೋಗ್ಯಾಧಿಕಾರಿಗಳ ತುರ್ತು ಸಭೆ ಕರೆದಿದ್ದು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮತ್ತಷ್ಟು ಟಫ್ ರೂಲ್ಸ್ ಬಗ್ಗೆ ಚರ್ಚಿಸಲಿದ್ದಾರೆ.
ಆರೋಗ್ಯ ಸಚಿವರ ಸಭೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಜ್ಞರು ಹಾಗೂ ಅಧಿಕಾರಿಗಳ ಮಹತ್ವದ ಸಭೆ ನಡೆಸಲಿದ್ದು, ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ ಸಾಧ್ಯತೆ ಬಹುತೇಕ ಖಚಿತವಾಗಿದ್ದು, ಕರುನಾಡಿಗೆ ಮತ್ತೆ ಲಾಕ್ ಡೌನ್ ಭೀತಿ ಶುರುವಾಗಿದೆ.