ಬೆಂಗಳೂರು: ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಗಳಲ್ಲೇ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನ ಬರ್ಬಾದ್ ಯಾತ್ರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಬಿಜೆಪಿ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BDA ಭ್ರಷ್ಟಾಚಾರ; ಸಾರ್ವಜನಿಕರಿಂದಲೂ ದೂರು; ಎಷ್ಟೇ ಪ್ರಭಾವಿಗಳಿರಲಿ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ಸಿಎಂ
ಸಿಎಂ ಬೊಮ್ಮಾಯಿಯವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದಿದ್ದಾರೆ.
ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.