ಗ್ರಾಮದಲ್ಲಿನ ಕುಡಿಯುವ ನೀರು ಸಂಗ್ರಹ ಟ್ಯಾಂಕ್ ಶಿಥಿಲಾವಸ್ಥೆ ತಲುಪಿದ್ದು, ಸಂಪೂರ್ಣವಾಗಿ ಹಾಳಾಗಿದೆ. ಇದರಲ್ಲಿ ಸಂಗ್ರಹವಾಗುವ ನೀರು ಬಳಕೆಗೆ ಯೋಗ್ಯವಾಗಿಲ್ಲ. ಹೀಗಾಗಿ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಆದೇಶ ನೀಡಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ್ ಎಂಬವರು ಈ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಇವರಿಗೆ ಕೆಲ ಗ್ರಾಮ ಪಂಚಾಯಿತಿ ಸದಸ್ಯರು ಸಹ ಸಾಥ್ ನೀಡಿದ್ದಾರೆ. ಹೊಸ ಟ್ಯಾಂಕ್ ನಿರ್ಮಾಣಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಹ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ಈ ಸಂದರ್ಭದಲ್ಲಿ ಆರೋಪಿಸಲಾಗಿದೆ.
ಈ ಸಂದರ್ಭದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಆದರೆ ಇದರಿಂದ ಸಮಾಧಾನಗೊಳ್ಳದ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಸದಸ್ಯರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳೇ ಸ್ಥಳಕ್ಕೆ ಬರಲಿ ಎಂದು ಪಟ್ಟು ಹಿಡಿದಿದ್ದರು. ಬಳಿಕ ಇನ್ನು ಹತ್ತು ದಿನಗಳೊಳಗಾಗಿ ಕಾರ್ಯಾದೇಶ ನೀಡಲಾಗುವುದು ಎಂದು ಖಚಿತ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ.