ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ ಶನಿವಾರದಂದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಮಂದಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಡಾ. ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ಹಾಗೂ ಜಮೀರ್ ಅಹ್ಮದ್ ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರಾಗಿದ್ದಾರೆ. ಸಾಮಾಜಿಕ ನ್ಯಾಯ, ಹಿರಿತನ, ಪಕ್ಷ ನಿಷ್ಠೆ ಮೊದಲಾದ ಮಾನದಂಡಗಳನ್ನು ಅನುಸರಿಸಿ ಇವರುಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಆದರೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ವೇಳೆ ಮಹಿಳೆಗೆ ಅವಕಾಶ ನೀಡದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಅವಕಾಶ ಸಿಗಬಹುದಾದರೂ ಸಹ ಸಿದ್ದರಾಮಯ್ಯನವರು ಮೊದಲ ಪಟ್ಟಿಯಲ್ಲಿಯೇ ಮಹಿಳೆಯೊಬ್ಬರಿಗೆ ಸಚಿವ ಸ್ಥಾನದ ಅವಕಾಶ ಕಲ್ಪಿಸಿ ಕೊಡಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.