ನವದೆಹಲಿ: ನವೆಂಬರ್ 29ರಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ್ಯಾಲಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿದೆ.
ಸಿಂಘು ಗಡಿಯಲ್ಲಿ ನಡೆಯುತ್ತಿದ್ದ ರೈತರ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಹಿಂಪಡೆಯಲು ತೀರ್ಮಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ನ.29 ರಂದು ಟ್ರ್ಯಾಕ್ಟರ್ ರ್ಯಾಲಿ ನಡೆಯಲ್ಲ. ಟ್ರ್ಯಾಕ್ಟರ್ ರ್ಯಾಲಿ ಹಿಂಪಡೆದಿಲ್ಲ, ಬದಲಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಧಾನಿ ಮೋದಿ ಉತ್ತರಕ್ಕಾಗಿ ಕಾಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಎಂ ಎಸ್ ಪಿ ಸಂಬಂಧ ಸಮಿತಿಯನ್ನು ರಚಿಸಬೇಕು. ನಮ್ಮ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ. ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಡಿಸೆಂಬರ್ 4ರ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.