ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ರಂದು ಮತ ಎಣಿಕೆ ನಿಗದಿಯಾಗಿದೆ.
ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗ ರಾಜಕೀಯ ಮುಖಂಡರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಟ್ಟಿದ್ದು, ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಸೇರಿದಂತೆ ಇತರ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ಜಿಲ್ಲಾ ಮೀಡಿಯಾ ಮಾನಿಟರಿಂಗ್ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕಿದೆ.
ಆದರೆ ಈ ರೀತಿ ಪೂರ್ವಾನುಮತಿ ಪಡೆಯದೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪಕ್ಷದ ಚಿಹ್ನೆ ಬಳಸಿ ಪರೀಕ್ಷೆ ಬರೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ವಿರಾಜಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.