ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಟರುಗಳಾದ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ದರ್ಶನ್ ಪಕ್ಷ ಭೇದ ಮರೆತು ತಮ್ಮ ಆತ್ಮೀಯರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೋ ಅವರ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ.
ಇದರ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸೊರಬ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಅಲ್ಲದೆ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಕಣಕ್ಕಿಳಿದಿರುವ ಸಾಗರ ಕ್ಷೇತ್ರದಲ್ಲೂ ರೋಡ್ ಶೋ ಮಾಡಿದ್ದಾರೆ.
ಈ ಎಲ್ಲದರ ನಡುವೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪಕ್ಷೇತರ ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಿ ಮತ ಯಾಚಿಸಿದ್ದಾರೆ. ಅರಕಲಗೂಡು ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಎಂ.ಟಿ. ಕೃಷ್ಣೇಗೌಡರ ಪರವಾಗಿ ಮಂಗಳವಾರದಂದು ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದ್ದಾರೆ.