ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಳೆದ 5 ವರ್ಷಗಳಲ್ಲಿ ಪೌರತ್ವ ಪಡೆದ ಸಾವಿರಾರು ಪಾಕಿಸ್ತಾನಿ ಹಿಂದೂ ನಿರಾಶ್ರಿತರು ಮತದಾನ ಮಾಡಲಿದ್ದಾರೆ. ಇದು ಗುಜರಾತ್ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವುದರಲ್ಲಿ ಅನುಮಾನವೇ ಇಲ್ಲ.
ವರದಿಗಳ ಪ್ರಕಾರ ಅಹಮದಾಬಾದ್ ಕಲೆಕ್ಟರ್ ಕಚೇರಿಯು 2016 ರಿಂದೀಚೆಗೆ 1032 ಪಾಕಿಸ್ತಾನಿ ಹಿಂದೂಗಳಿಗೆ ಭಾರತೀಯ ಪೌರತ್ವವನ್ನು ಒದಗಿಸಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳು ಕಿರುಕುಳವನ್ನು ಎದುರಿಸುತ್ತಾರೆ. ಆಶ್ರಯ ಅರಸಿ ಭಾರತಕ್ಕೆ ಓಡಿ ಬರುತ್ತಾರೆ.
ನಿರಾಶ್ರಿತರಿಗೆ ಪೌರತ್ವ ನೀಡುವ ಅಧಿಕಾರ ಯಾರಿಗಿದೆ?
ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವ ದಾಖಲೆಗಳನ್ನು ನೀಡುವ ಅಧಿಕಾರ ಜಿಲ್ಲಾಧಿಕಾರಿ ಕಚೇರಿ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಒಪ್ಪಿಗೆ ನೀಡಿದರೆ ಮಾತ್ರ ಪೌರತ್ವವನ್ನು ನೀಡಬಹುದು. ಆಗಸ್ಟ್‌ನಲ್ಲಿ ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಅವರು ಪಾಕಿಸ್ತಾನದಿಂದ ಬಂದ 40 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಪ್ರಮಾಣಪತ್ರಗಳನ್ನು ನೀಡಿದ್ದರು. ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಸಿಕ್ಕಿರುವುದು ನಿರಾಶ್ರಿತರಿಗೂ ಖುಷಿ ಕೊಟ್ಟಿದೆ.
ಗುಜರಾತ್ ಚುನಾವಣೆಗೆ ಸಿದ್ಧತೆ…
ಗುಜರಾತ್‌ನಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತದಾನ ನಡೆಯಲಿದೆ. 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು ಡಿಸೆಂಬರ್ 8 ರಂದು ಮತ ಎಣಿಕೆಗೆ ಮುಹೂರ್ತ ನಿಗದಿಪಡಿಸಲಾಗಿದೆ. 2022ರ ಗುಜರಾತ್ ವಿಧಾನಸಭೆ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿವೆ. ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಸರ್ಕಾರ ಉಳಿಸಿಕೊಳ್ಳುವ ಕಸರತ್ತಿನಲ್ಲಿದ್ರೆ, ಕಾಂಗ್ರೆಸ್ 27 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬರುವ ಹವಣಿಕೆಯಲ್ಲಿದೆ.