ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜಾ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ ರಾಮ್ ಚರಣ್ ತೇಜ, ಪುನೀತ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮ್ ಚರಣ್, ಪುನೀತ್ ರಾಜ್ ಕುಮಾರ್ ಇಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗುತ್ತಿದೆ. ಈ ದುಃಖವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಭಾವುಕರಾದರು.
ಪುನೀತ್ ಅಗಲಿಕೆ ಕುಟುಂಬ ಸದಸ್ಯನನ್ನು ಕಳೆದುಕೊಂಡಷ್ಟು ಬೇಸರವಾಗುತ್ತಿದೆ. ಏನು ಮಾತನಾಡಬೇಕು ಎಂಬುದೂ ಗೊತ್ತಾಗುತ್ತಿಲ್ಲ. ಇಡೀ ಭಾರತೀಯ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟುಮಾಡಿದೆ. ಪುನೀತ್ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕಂಬನಿ ಮಿಡಿದರು.