ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣಕ್ಕಿಳಿದಿದ್ದರೆ, ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಿಂದ ಮಲ್ಲೇಶ್ ಸ್ಪರ್ಧಿಸಿದ್ದಾರೆ. ಮಂಡ್ಯ ಮತ್ತು ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದು, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಪರ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಬುಧವಾರದಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಹಾಸನದ 89ನೇ ಬೂತ್ ನಿಂದ ಪ್ರಚಾರ ಆರಂಭಿಸಿದ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಗೌಡ, ತಮ್ಮ ಪ್ರಚಾರದ ಸಂದರ್ಭದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಹೇಳದೆ ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮೈತ್ರಿ ಧರ್ಮ ಪಾಲಿಸುತ್ತಿಲ್ಲವೆಂದು ನಿಮ್ಮ ವಿರುದ್ಧ ಬಿಜೆಪಿ ಕೇಂದ್ರ ನಾಯಕರಿಗೆ ದೂರು ನೀಡಲಾಗಿದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಸಿಡಿಮಿಡಿಗೊಂಡ ಪ್ರೀತಂ ಗೌಡ, ನನ್ನ ವಿರುದ್ಧ ಯಾರಾದರೂ ದೂರು ಕೊಟ್ಟರೆ ನನಗೆ ರಾಜಕೀಯವೇ ಬೇಡವೆಂದು ಮನೆಯಲ್ಲಿ ಕೂರುತ್ತೇನೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರಿಂದ ನನಗೆ ಯಾವುದೇ ಸೂಚನೆ ಬಂದಿಲ್ಲ, ಬೇಕಾದರೆ ಯಾರನ್ನಾದರೂ ಕೇಳಿ ಎಂದು ಪ್ರತಿಕ್ರಿಯಿಸಿದ್ದಾರೆ.