ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಇಂದು ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ.
ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಪಿಗಳನ್ನು ಶೀಘ್ರದಲ್ಲೇ ಹೆಡೆಮುರಿ ಕಟ್ಟುತ್ತೇವೆ. ಪೊಲೀಸರು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನತೆ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ ಮುಖ್ಯಮಂತ್ರಿಗಳು, ಆರೋಪಿಗಳು ಎಲ್ಲೇ ಅಡಗಿಕೊಂಡಿದ್ದರೂ ಸಹ ಅವರನ್ನು ಕಾನೂನಿನ ಕಟಕಟೆಗೆ ಒಪ್ಪಿಸುತ್ತೇವೆ ಎಂದು ಹೇಳಿದ್ದಾರೆ.