alex Certify ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಹೆಸರು ಅಂತಿಮವಾಗಿರುವವರು ಪ್ರಚಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದರ ಮಧ್ಯೆ ಎರಡನೇ ಪಟ್ಟಿ ಬಿಡುಗಡೆಯಾಗದಿದ್ದರೂ ಸಹ ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದು ಗೊಂದಲಕ್ಕೆ ಕಾರಣವಾಗಿತ್ತು. ಈ ಕ್ಷೇತ್ರದಿಂದ ಸ್ವರೂಪ್ ಅವರಿಗೆ ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದರೆಂದು ಹೇಳಲಾಗಿದ್ದು, ಇದರ ಮಧ್ಯೆ ಭವಾನಿ ರೇವಣ್ಣನವರ ಈ ಹೇಳಿಕೆ ಸಹಜವಾಗಿಯೇ ಪಕ್ಷದ ಒಂದು ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.

ಅಲ್ಲದೆ ಎಚ್.ಡಿ. ರೇವಣ್ಣನವರ ಪುತ್ರ ಸೂರಜ್ ರೇವಣ್ಣ, ಹಾಸನದಿಂದ ಭವಾನಿ ರೇವಣ್ಣನವರು ಅಭ್ಯರ್ಥಿಯಾದರೆ ಗೆಲುವು ಖಚಿತ. ಹಾಸನ ಜಿಲ್ಲೆಯ ಟಿಕೆಟ್ ಹಂಚಿಕೆ ತೀರ್ಮಾನವನ್ನು ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡರು ಹಾಗೂ ರೇವಣ್ಣ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದು, ಗೊಂದಲ ಮತ್ತಷ್ಟು ಮುಂದುವರೆಯುವಂತೆ ಮಾಡಿತ್ತು. ಆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಎಚ್.ಡಿ. ರೇವಣ್ಣ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದರು.

ಹಾಸನ ಸೇರಿದಂತೆ ಕರ್ನಾಟಕದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಹಂಚಿಕೆ ತೀರ್ಮಾನವನ್ನು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಕುಮಾರಸ್ವಾಮಿ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಫೆಬ್ರವರಿ 3ರಂದು ಹಾಸನದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಹೇಳಲಾಗಿದ್ದು, ಭವಾನಿ ರೇವಣ್ಣನವರಿಗೆ ಟಿಕೆಟ್ ಕೊಡಲಾಗುತ್ತಾ, ಇಲ್ಲವಾ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...