ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಸಂವಿಧಾನ ವಿರೋಧಿ ಕೃತ್ಯದಲ್ಲಿ ತೊಡಗಿಕೊಂಡರೆ ಬಜರಂಗದಳ, ಪಿಎಫ್ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಘೋಷಿಸಲಾಗಿತ್ತು.
ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಾಷಣಗಳಲ್ಲೂ ಇದನ್ನು ಪ್ರಸ್ತಾಪಿಸಿದ್ದರು. ಪಿಎಫ್ಐ ಜೊತೆ ದೇಶಪ್ರೇಮದ ಚಿಂತನೆ ಹೊಂದಿರುವ ಬಜರಂಗದಳವನ್ನು ಹೋಲಿಕೆ ಮಾಡಿದ್ದೇ ಸರಿಯಲ್ಲ ಎಂಬ ಟೀಕೆ ಕೇಳಿ ಬಂದಿತ್ತು.
ಇದರ ಮಧ್ಯೆ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೊರಡಿಸಿರುವ ಘೋಷಣೆಗೆ ವಿರೋಧ ವ್ಯಕ್ತಪಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಚಾರಕ್ಕೆ ಬಜರಂಗದಳ ಕಾರ್ಯಕರ್ತರು ಅಡ್ಡಿಪಡಿಸಿದ ವೇಳೆ, ಲಕ್ಷ್ಮಿ ಹೆಬ್ಬಾಳ್ಕರ್, ಜೈ ಬಜರಂಗಬಲಿ, ಪವನ ಪುತ್ರ ಹನುಮಾನ್ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.
ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಶನಿವಾರದಂದು ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಬಂದ ಬಜರಂಗದಳ ಕಾರ್ಯಕರ್ತರು ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ. ಅಲ್ಲದೆ ‘ಜೈ ಬಜರಂಗಬಲಿ’ ಎಂದು ಘೋಷಣೆ ಕೂಗಿದ್ದು ಇದಕ್ಕೆ ಪ್ರತಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಘೋಷಣೆ ಕೂಗಿದ್ದಾರೆ.