ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅವರಿಗೆ ವಿಪಕ್ಷಗಳಿಗಿಂತ ಕೆಲ ಸ್ವಪಕ್ಷಿಯರಿಂದಲೇ ಪದೇ ಪದೇ ಟೀಕೆ ಕೇಳಿ ಬರುತ್ತಿತ್ತು. ಅದರಲ್ಲೂ ಈ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದು, ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಸಮಯ ಸಿಕ್ಕಾಗಲೆಲ್ಲಾ ಕಿಡಿ ಕಾರುತ್ತಿದ್ದರು.
ಈ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ವರಿಷ್ಠರಿಗೆ ಹಲವು ಬಾರಿ ದೂರು ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ಆದರೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತವರ ಕುಟುಂಬದ ವಿರುದ್ಧ ಯಾವುದೇ ಟೀಕೆ ಮಾಡದಂತೆ ಯತ್ನಾಳ್ ಅವರಿಗೆ ಹೈಕಮಾಂಡ್ ಖಡಕ್ ಸೂಚನೆ ನೀಡಿತ್ತು.
ಇದರ ಮಧ್ಯೆ ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಮೃದು ಧೋರಣೆ ತೋರಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅಂತಹ ದೊಡ್ಡ ಅಪರಾಧವೇನು ಮಾಡಿಲ್ಲ. ಈಗ ಅವರು ಸುಧಾರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವ ಕುರಿತಂತೆ ಸಿ.ಟಿ. ರವಿ ಆಡಿರುವ ಮಾತುಗಳ ಕುರಿತು ಪ್ರತಿಕ್ರಿಸಿದ ಯಡಿಯೂರಪ್ಪನವರು, ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಹೀಗಾಗಿ ಅವರಿಗೆ ಮಾತನಾಡುವ ಅಧಿಕಾರವಿದೆ. ಅವರ ಹೇಳಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.