alex Certify ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಬೆನ್ನಲ್ಲೇ ಯತ್ನಾಳ್ ಗೆ ತೀವ್ರ ಹಿನ್ನಡೆ; ಪ್ರತಿಪಕ್ಷ ನಾಯಕನ ಸ್ಥಾನಕ್ಕೂ ಕುತ್ತು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಬೆನ್ನಲ್ಲೇ ಯತ್ನಾಳ್ ಗೆ ತೀವ್ರ ಹಿನ್ನಡೆ; ಪ್ರತಿಪಕ್ಷ ನಾಯಕನ ಸ್ಥಾನಕ್ಕೂ ಕುತ್ತು…!

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಡಿಯೂರಪ್ಪನವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಇವರ ಈ ಆಯ್ಕೆ ಹಿಂದೆ ಹಲವು ಲೆಕ್ಕಾಚಾರಗಳಿವೆ ಎಂದು ಹೇಳಲಾಗುತ್ತಿದೆ.

ವಯಸ್ಸಿನ ಕಾರಣವೊಡ್ಡಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರನ್ನು ಆ ಸ್ಥಾನದಿಂದ ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿದ್ದರೂ ಸಹ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಿಂಗಾಯಿತ ಸಮುದಾಯದ ಮತಗಳು ಬಿಜೆಪಿಗೆ ನಿರೀಕ್ಷಿತ ಪ್ರಮಾಣದಲ್ಲಿ ದೊರೆತಿರಲಿಲ್ಲ ಎಂದು ಹೇಳಲಾಗಿತ್ತು.

ಹೀಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯಿತ ಸಮುದಾಯದ ಮತಗಳನ್ನು ಸೆಳೆಯಲು ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಲಾಗಿದೆ. ವಿಜೇಂದ್ರ ಅವರ ಆಯ್ಕೆಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದಲ್ಲಿ ಭಾರಿ ಹಿನ್ನಡೆಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಿಜಯೇಂದ್ರ ಮತ್ತು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿಯೇ ನಿರಂತರ ಆರೋಪಗಳನ್ನು ಮಾಡುತ್ತಿದ್ದ ಯತ್ನಾಳ್, ಪರೋಕ್ಷವಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲು ಕಾರಣಕರ್ತರಾಗಿದ್ದರು. ಆ ಬಳಿಕವೂ ಸಹ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದರು.

ಅಲ್ಲದೆ ವಿಧಾನಸಭೆ ವಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಯತ್ನಾಳ್ ಈ ನಿಟ್ಟಿನಲ್ಲಿ ಪ್ರಯತ್ನ ಕೂಡ ನಡೆಸಿದ್ದರು. ಆದರೆ ಇದೀಗ ಲಿಂಗಾಯಿತ ಸಮುದಾಯಕ್ಕೆ ಸೇರಿದ ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಕಾರಣ ವಿಧಾನಸಭೆ ವಿಪಕ್ಷ ನಾಯಕನ ಸ್ಥಾನವನ್ನು ಹಿಂದುಳಿದ ಅಥವಾ ಒಕ್ಕಲಿಗ ಸಮುದಾಯದವರಿಗೆ ಲಭಿಸಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಯತ್ನಾಳ್ ಅವರಿಗೆ ಈ ವಿಷಯದಲ್ಲೂ ಹಿನ್ನಡೆಯಾದಂತಾಗಿದೆ. ಇನ್ನು ವಿಜಯೇಂದ್ರ ನೇಮಕ ಕುರಿತಂತೆ ಬಸನಗೌಡ ಪಾಟೀಲ್ ಯತ್ನಾಳ್ ಯಾವ ಪ್ರತಿಕ್ರಿಯೆ ನೀಡಬಹುದು ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...