ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲ ತಿಂಗಳುಗಳಷ್ಟೇ ಬಾಕಿ ಇದ್ದು, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಬಳಿಕ ಅವರಿಗೆ ಯಾವುದೇ ಜವಾಬ್ದಾರಿ ನೀಡಲಾಗಿರಲಿಲ್ಲ. ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪನವರನ್ನು ಬಿಜೆಪಿ ಕಡೆಗಣಿಸುತ್ತಿರುವುದಕ್ಕೆ ಒಳಗೊಳಗೆ ಆಕ್ರೋಶ ವ್ಯಕ್ತವಾಗುತ್ತಿತ್ತು.
ಅಲ್ಲದೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಿ ಮಂತ್ರಿ ಮಾಡಬಹುದೆಂಬ ನಿರೀಕ್ಷೆಯೂ ಹುಸಿಯಾಗಿತ್ತು. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಬಿಜೆಪಿ ಹೈಕಮಾಂಡ್, ಅಂತಿಮವಾಗಿ ಯಡಿಯೂರಪ್ಪನವರಿಗೆ ಪಕ್ಷದಲ್ಲಿ ಮಹತ್ವದ ಸ್ಥಾನಮಾನ ನೀಡುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.