ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬೆಂಬಲಿಸಿ ಅಧಿಕಾರಕ್ಕೆ ತಂದಿದ್ದಕ್ಕೆ ನನಗೆ ಈಗ ಪಶ್ಚಾತಾಪವಾಗುತ್ತಿದೆ ಎಂದು ಹೇಳಿದ್ದಾರೆ.
ಬಿಜೆಪಿ ಹಿಂದೂಗಳ ಪರ ಎಂದುಕೊಂಡು ಎಲ್ಲ ಹಿಂದುಗಳು ಆ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಆದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ದಾರಿ ತಪ್ಪಿದ್ದು, ಹಿಂದೂಗಳಿಗೆ ಅನ್ಯಾಯವಾಗುತ್ತಿದ್ದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ನಡೆದು ಹಲವು ತಿಂಗಳುಗಳೇ ಕಳೆದಿವೆ. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಅವರುಗಳಿಗೆ ಬೇಗನೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ಬಿರಿಯಾನಿ ಕೊಟ್ಟು ಸಾಕಲಾಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ಏನು ಕತ್ತೆ ಕಾಯುತ್ತಿದೆಯಾ ಎಂದು ಆಕ್ರೋಶ ಹೊರಹಾಕಿದರು.